Girish Karnad

Girish Karnad

ಗಿರೀಶ್ 1934ರ ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ಉತ್ತರಕನ್ನಡದ ಶಿರಸಿಯಲ್ಲಿ ಪ್ರಾಥಮಿ ಶಿಕ್ಷಣ ಧಾರವಾಡದ ಬಾಸೆಲ್ ಮಿಶನ್ ಪ್ರೌಢಶಿಕ್ಷಣ, ಹಾಗೂ ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದ ಬಳಿಕ ಪ್ರತಿಷ್ಠಿತ ರೋಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್ ಫರ್ಡಿನಲ್ಲಿ ಹೆಚ್ಚಿನ ವ್ಯಾಸಂಗ ಮಾಡಿದರು. ಆಕ್ಸ್ ಫರ್ಡಿನ ಡಿಬೇಟ್ ಕ್ಲಬ್ಬಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಇವರು. ಮದ್ರಾಸಿನಲ್ಲಿ ನೌಕರಿಯಲ್ಲಿದ್ದ ಇವರು ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ನಾಟಕಕಾರ ಗಿರೀಶ್ ಕಾರ್ನಾಡ್ ಅವರು ರಂಗಭೂಮಿ- ಚಲನಚಿತ್ರ ನಟರಾಗಿ, ನಿರ್ದೇಶಕರಾಗಿ, ಸಂಗೀತ- ನಾಟಕ ಅಕಾಡೆಮಿಗಳ ಅಧ್ಯಕ್ಷರಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧರಾಗಿದ್ದಾರೆ. ಕತೆ, ವಿಮರ್ಶೆ ಮತ್ತು ತಮ್ಮ ಆತ್ಮಕತೆ ‘ಆಡಾಡತ ಆಯುಷ್ಯ’ಗಳನ್ನು ಬರೆದಿದ್ದರೂ ನಾಟಕಕಾರ ಎಂದೇ ಚಿರಪರಿಚಿತರು.
ಯಯಾತಿ, ತುಘಲಕ್, ಹಯವದನ, ನಾಗಮಂಡಲ, ತಲೆದಂಡ, ಅಗ್ನಿ ಮತ್ತು ಮಳೆ, ಅಂಜುಮಲ್ಲಿಗೆ, ಹಿಟ್ಟಿನ ಹುಂಜ, ಟಿಪ್ಪುವಿನ ಕನಸುಗಳು ನಾಟಕಗಳು. ಆಡಾಡತ ಆಯುಷ್ಯ’ ಗಿರೀಶರ ಆತ್ಮಕಥೆ ಹಲವಾರು ಭಾಷೆಗಳ ಚಲನಚಿತ್ರಗಳಲ್ಲಿ ನಟಿಸಿರುವ ಕಾರ್ನಾಡ್ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರೂ ಹೌದು. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಕಾಡು, ಒಂದಾನೊಂದು ಕಾಲದಲ್ಲಿ, ಕಾನೂರು ಹೆಗ್ಗಡತಿ, ಉತ್ಸವ್ ಮುಂತಾದ ಸಿನಿಮಾಗಳು; ಸೂಫಿ ಪಂಥ, ಕನಕ ಪುರಂದರ ಸಾಕ್ಷಚಿತ್ರಗಳನ್ನು ನಿರ್ದೇಶಿಸಿದ್ದಾರೆ. ನಾಟಕ ಸಾಹಿತ್ಯ ರಚನೆಗೆ ಜ್ಞಾನಪೀಠ ಪ್ರಶಸ್ತಿ ಪಡೆದ ಕಾರ್ನಾಡರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಪದ್ಮಶ್ರೀ, ಪದ್ಮಭೂಷಣ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಹಾಗೂ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಅನಾರೋಗ್ಯದಿಂದ ಕಾರ್ನಾಡ್ ಅವರು 2019ರ ಜೂನ್ 10ರಂದು ಬೆಂಗಳೂರಿನ ನಿವಾಸದಲ್ಲಿ ನಿಧನರಾದರು.

Books By Girish Karnad